ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಗ್ರಾಪಂ ಸಿಬ್ಬಂದಿ, ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​​​ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ನಾಳೆಯಿಂದ ನಗರದ ಫ್ರೀಡಂಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.

ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಗ್ರಾಮೀಣಾಭಿವೃದ್ಧಿ ಇಲಾಖೆಯ ಪಿಡಿಒ, ಲೆಕ್ಕ ಸಹಾಯಕರು, ಲೆಕ್ಕ ಸಿಬ್ಬಂದಿಗಳು, ಡೇಟಾ ಎಂಟ್ರಿ ಆಪರೇಟರ್​ಗಳು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ.

7 ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡಬೇಕು. ಜಿಲ್ಲೆಯಲ್ಲಿ ಸ್ವಇಚ್ಚೆ ಇಲ್ಲದೇ ಸಾರ್ವಜನಿಕ ಹಿತಾಸಕ್ತಿ ಹಿತದೃಷ್ಟಿ ತೋರದೇ ವರ್ಗಾವಣೆ ಮಾಡಬಾರದು ಮತ್ತು ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆ ಪಡೆಯಬೇಕು.

ರಾಜ್ಯದ ಎಲ್ಲಾ ಪಂಚಾಯತ್​​ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್​ ಗ್ರೂಪ್​​ ಬಿ. ದರ್ಜೆಗೆ ಉನ್ನತಿ ಹಾಗೂ ಗ್ರಾಮ ಪಂಚಾಯಿತಿಗೆ ಅಗತ್ಯವಿರುವ ಕಾರ್ಯದರ್ಶಿಗಳು ಲೆಕ್ಕ ಸಹಾಯಕರು ಹಾಗೂ ಅಗತ್ಯವಿದ್ದಷ್ಟು ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ನೇಮಿಸಬೇಕು. ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧಕ್ಷ ರಾಜು ವಾರದ ಆಗ್ರಹಿಸಿದ್ದಾರೆ.

You cannot copy content from Baravanige News

Scroll to Top