ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಸೇರಿದಂತೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಚ್.ಎ.ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂಸದ ತೇಜಸ್ವಿ ಸೂರ್ಯ, ಶಾಸಕ ಅರವಿಂದ ಲಿಂಬಾವಳಿ ಹಾಜರಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತಶ್ರೇಷ್ಠ ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಶಾಸಕರ ಭವನ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪೂರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಇನ್ನು ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು.
ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ ಒಟ್ಟು ವೆಚ್ಚ 20,000 ರೂ ಇದ್ದು, ಇದರಲ್ಲಿ ಸರ್ಕಾರ 5000ರೂ ಸಹಾಯಧನ ನೀಡುತ್ತಿದೆ.
ಪ್ರವಾಸದಲ್ಲಿ ಆಹಾರ, ವಸತಿ ಹಾಗೂ ಇನ್ನಿತರ ಸೌಕರ್ಯಗಳನ್ನು ಯಾತ್ರಿಕರಿಗೆ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಕಾನೂನು ಮತ್ತು ಸಂಸದೀಯ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ರಾಜ್ಯದ ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಹಾಗೂ ಇತರ ಗಣ್ಯರು ಹಾಜರಿದ್ದರು.