ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದು ಇದರ ಮಧ್ಯೆ, ಮಧ್ಯಂತರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಶೇಕಡ 17ರಷ್ಟು ವೇತನ ಹೆಚ್ಚಿಸಿದೆ.
2023ರ ಏಪ್ರಿಲ್ 1ರಿಂದ ಹೊಸ ವೇತನ ಪದ್ಧತಿ ಜಾರಿಗೆ ಬರಲಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರದಿಂದ ಹಿಂದೆ ಸರಿದಿದೆ.
ನಮಗೆ ಈ ಆದೇಶ ಸಂತೃಪ್ತಿ ಅಲ್ಲದಿದ್ದರೂ ಸಮಾಧಾನ ನೀಡಿದೆ. ನಾವು 25% ಕೇಳಿದ್ದೆವು, ಆದರೆ ಸರ್ಕಾರ 17% ಅಷ್ಟೇ ನೀಡಿದೆ. ಹಾಗಾಗಿ ನಾವು ಮುಷ್ಕರ ವಾಪಾಸ್ ಪಡೆಯುತ್ತಿದ್ದೇವೆ. ಆದರೆ ನಮ್ಮ ಬೇಡಿಕೆ ಈಡೇರಿಕೆಗಾಗಿ ಹೋರಾಟ ಜಾರಿ ಇರುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿಕೆ ನೀಡಿದ್ದಾರೆ.
19.11.2022ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ.
ಈ ಕೆಳಕಂಡ ಆದೇಶವನ್ನು ಹೊರಡಿಸಿದೆ..:
- 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 01ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.
- ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ “ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ) ವೈಯಕ್ತಿಕ ವೇತನ, (ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ, ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.
- ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಭ್ಯಗಳನ್ನು ಸೇರಿಸತಕ್ಕದ್ದಲ್ಲ.
- ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
- ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶವು ಅನ್ವಯಿಸುತ್ತದೆ.
- ಸ್ಥಳೀಯ ಸಂಸ್ಥೆಗಳ (ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯ) ನೌಕರರಿಗೆ ಸೌಲಭ್ಯವನ್ನು ಮಂಜೂರು ಮಾಡುವುದರಿಂದ ಉಂಟಾಗುವ ವೆಚ್ಚವನ್ನು ಅನ್ವಯಿಸುವ ಸ್ಥಳೀಯ ಸಂಸ್ಥೆಗಳೇ ಭರಿಸತಕ್ಕದ್ದು.
- ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ, ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಈ ಆದೇಶವು ಅನ್ವಯಿಸುವುದಿಲ್ಲ.
- ತಾತ್ಕಾಲಿಕ ಪರಿಹಾರದ ಕಾರಣದಿಂದ ಸಂದಾಯ ಮಾಡಲು ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಶಗಳನ್ನು ಮುಂದಿನ ರೂಪಾಯಿಗೆ ಪೂರ್ಣಾಂಕಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.ಈ ಆದೇಶದ ಮೂಲಕ ಮಂಜೂರಾದ ತಾತ್ಕಾಲಿಕ ಪರಿಹಾರದ ಮೊತ್ತವು ವಿಶಿಷ್ಠ ಸಂಭಾವನೆಯಾಗಿದ್ದು, ಇದು ನಿವೃತ್ತಿ ಸೌಲಭ್ಯ/ತುಟ್ಟಿ ಭತ್ಯೆಯನ್ನು ನಿರ್ಧರಿಸುವಾಗ ಅಥವಾ ಬೇರೆ ಯಾವುದೇ ಉದ್ದೇಶಗಳಿಗೆ ಪರಿಗಣಿಸತಕ್ಕದ್ದಲ್ಲ.
- ಈ ಆದೇಶದ ಮೂಲಕ ಮಂಜೂರಾದ ತಾತ್ಕಾಲಿಕ ಪರಿಹಾರದ ಮೊತ್ತವು ವಿಶಿಷ್ಠ ಸಂಭಾವನೆಯಾಗಿದ್ದು, ಇದು ನಿವೃತ್ತಿ ಸೌಲಭ್ಯ/ತುಟ್ಟಿ ಭತ್ಯೆಯನ್ನು ನಿರ್ಧರಿಸುವಾಗ ಅಥವಾ ಬೇರೆ ಯಾವುದೇ ಉದ್ದೇಶಗಳಿಗೆ ಪರಿಗಣಿಸತಕ್ಕದ್ದಲ್ಲ.