ನವದೆಹಲಿ: ಮಂಗಳವಾರವೂ(ಮಾರ್ಚ್ 29) ಮತ್ತೆ ತೈಲ ಬೆಲೆ ಏರಿಕೆ ಮುಂದುವರಿದಿದ್ದು, ಪೆಟ್ರೋಲ್ ಪ್ರತಿ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 70 ಪೈಸೆಯಷ್ಟು ಏರಿಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಸತತ ಏಳು ದಿನಗಳಿಂದ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಮಾಡಿದ ಪರಿಣಾಮ ದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈ, ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಬೆಲೆ 100.21 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್ ಗೆ 91.47 ರೂಪಾಯಿಗೆ ಹೆಚ್ಚಳವಾಗಿದೆ. ವಾಣಿಜ್ಯ ನಗರಿ ಮುಂಬೈಯಲ್ಲಿ ಪೆಟ್ರೋಲ್ ಲೀಟರ್ ಗೆ 115.04 ರೂಪಾಯಿಗೆ ಮಾರಾಟವಾಗುತ್ತಿದ್ದು, ಡೀಸೆಲ್ ಬೆಲೆ ಲೀಟರ್ ಗೆ 99.25ರೂಪಾಯಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 105.62 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 89.70 ರೂಪಾಯಿಗೆ ಹೆಚ್ಚಳವಾಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 76 ಪೈಸೆಯಷ್ಟು ಹೆಚ್ಚಳವಾಗಿದ್ದು, ಇಲ್ಲಿ ಪೆಟ್ರೋಲ್ ಬೆಲೆ 105.94 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಡೀಸೆಲ್ ಬೆಲೆ ಲೀಟರ್ ಗೆ 96 ರೂಪಾಯಿ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 109.68 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 94.62 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
ರಷ್ಯಾ, ಉಕ್ರೇನ್ ನಡುವಿನ ಯುದ್ಧ ಮುಂದುವರಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ಭಾರತ ಅತೀ ಹೆಚ್ಚು ತೈಲ ಆಮದು ಮಾಡಿಕೊಳ್ಳುತ್ತಿರುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ವರದಿ ವಿವರಿಸಿದೆ.