ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಉಡುಪಿ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ. 31ರಿಂದ ಎ.15ರವರೆಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಗಳನ್ನು ಸುಸೂತ್ರ ಹಾಗೂ ದೋಷರಹಿತವಾಗಿ ನಡೆಸಲು ಸಲುವಾಗಿ ಉಡುಪಿ ಹಾಗೂ ದ.ಕ. ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಉಡುಪಿಯಲ್ಲಿ 55 ಮತ್ತು ದ.ಕ. ಜಿಲ್ಲೆಯ 98 ಪರೀಕ್ಷಾ ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ.


ಉಡುಪಿ ಜಿಲ್ಲೆಯಲ್ಲಿ 7,185 ಬಾಲಕರು, 6,568 ಬಾಲಕಿಯರ ಸಹಿತ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದಕ್ಷಿಣ ಕನ್ನಡದಲ್ಲಿ 523 ಶಾಲೆಗಳಿಂದ ಒಟ್ಟು 29,572 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬಂದಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಪಾಸ್‌ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಇದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

Scroll to Top