ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.
ದಕ್ಷಿಣ ಕನ್ನಡ ಸಂಸದರಾಗಿ 3ನೇ ಅವಧಿಗೆ ಕಾರ್ಯ ನಿರ್ವಹಿಸುತ್ತಿರುವ ನಳಿನ್ ಕುಮಾರ್ ಕಟೀಲ್ ರವರು 2ನೇ ಅವಧಿಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮೇ.10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡದ್ದಲ್ಲದೆ ದಯನೀಯ ಸ್ಥಿತಿಯಲ್ಲಿ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸೋಲಿನ ಹೊಣೆ ಹೊರುವುದಾಗಿ ಈಗಾಗಲೇ ತಿಳಿಸಿರುವ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆ. ಸದ್ಯಕ್ಕೆ ರಾಜೀನಾಮೆ ನೀಡದಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿಲ್ಲ. ಸೋಲಿನ ಕುರಿತು ವಿಮರ್ಶೆ ನಡೆಸಿ ಮುಂದಕ್ಕೆ ಪಕ್ಷವನ್ನು ಯಾವ ರೀತಿ ಸಂಘಟಿಸಬೇಕು ಎಂದು ಚರ್ಚೆ ನಡೆಸಿದ ಬಳಿಕ ಹೈಕಮಾಂಡ್ ಸೂಚನೆ ಮೇರೆಗೆ ನಳಿನ್ ಕುಮಾರ್ ರಾಜೀನಾಮೆ ನೀಡಲಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಲಿರುವುದರಿಂದ ಮುಖ್ಯಮಂತ್ರಿ
ಯಾರಾಗುತ್ತಾರೆ, ಯಾವ ಸಮುದಾಯದವರು ಆಗುತ್ತಾರೆ
ಎಂಬುದನ್ನು ನೋಡಿಕೊಂಡು ವಿಧಾನಸಭೆಯ ಪ್ರತಿಪಕ್ಷ
ನಾಯಕರನ್ನು ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ. ಆ ಬಳಿಕ
ನಳಿನ್ ಕುಮಾರ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.