ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ: ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಆ.4: ರಾಜ್ಯದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಗಂಟೆಗೆ 50 ರಿಂದ 60 ಕಿ.ಮೀ ತಲುಪುವ ಸಾಧ್ಯತೆಗಳಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿದ್ದು, ಈಗಾಗಲೇ ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಹಾಸನ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ.

ಮೂರು ದಿನಗಳಿಂದ ಉದ್ಯಾನನಗರಿ ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ನಗರದ ಜನತೆ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತ್ಯಂತ ಹೆಚ್ಚಿನ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಜನ ರಾತ್ರಿಯೆಲ್ಲ ನಿದ್ದೆ ಇಲ್ಲದೆ ಮಳೆಯ ನೀರನ್ನು ಹೊರಹಾಕುವುದರಲ್ಲಿ ನಿರತರಾಗಿದ್ದರು. ಮಳೆ ಹಿನ್ನೆಲೆಯಲ್ಲಿ ಇಲ್ಲಿನ ಸಂಪಂಗಿರಾಮ ನಗರದಲ್ಲಿ ಮನೆಯೊಂದರ ಗೋಡೆ ಕುಸಿತವಾಗಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

Scroll to Top