ಸಿಎಂ ಆದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ.

ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ಯರು, ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪುತ್ತೂರು ನಗರ ಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಹೇಳಿದ್ದರು.

24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದೀಗ ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಆಕ್ರೊಶಕ್ಕೆ ಕಾರಣವಾಗಿದ್ದು, ಇದು ಮುಂದೆ ಯಾವ ಹಂತಕ್ಕೆ ಮುಟ್ಟಲಿದೆ ಎಂದು ಕಾದುನೋಡಬೇಕಿದೆ.

You cannot copy content from Baravanige News

Scroll to Top