ರಾಜ್ಯಾದ್ಯಂತ ವ್ಯಾಪಿಸುತ್ತಿದೆ ಸಾಂಕ್ರಾಮಿಕ ಡೆಂಗ್ಯೂ – ಎಚ್ಚರ ಇರಲಿ : ರಾಜ್ಯದ ಜನರಿಗೆ ಸಿಎಂ ಮನವಿ

ಬೆಂಗಳೂರು : ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಹೀಗಾಗಿ ಎಲ್ಲರೂ ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಹೇಳಿದ್ದಾರೆ.

ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಡೆಂಗ್ಯೂ ಬಗ್ಗೆ ಭಯ ಬೇಡ, ಆದರೆ ಜಾಗೃತೆ ವಹಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Scroll to Top