ಮದುವೆ, ರಾಜಕೀಯ ಕಾರ್ಯಕ್ರಮಗಳಿಗೆ ಪಟಾಕಿ ನಿಷೇಧ, ಹಸಿರು ಪಟಾಕಿಗೆ ಅವಕಾಶ; ಸಿಎಂ

ಬೆಂಗಳೂರು, ಅ 10: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು , ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಮುಂದೆ ಕಠಿಣವಾಗಿ ಸುಪ್ರೀಂ ಆದೇಶವನ್ನ ಪಾಲಿಸಬೇಕು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ದೀಪಾವಳಿ ಸಮೀಪವೇ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ. ಪಟಾಕಿ ಮಾರಾಟಕ್ಕೆ ಒಮ್ಮೆ ಪರವಾನಗಿ ಪಡೆದರೆ ಐದು ವರ್ಷದ ತನಕ ನವೀಕರಣಕ್ಕೆ ಇರುತ್ತಿತ್ತು. ಆದರೆ ಈಗ ಪ್ರತಿ ವರ್ಷವೂ ಹೊಸದಾಗಿ ಲೈಸೆನ್ಸ್ ತೆಗೆದುಕೊಳ್ಳಬೇಕು. ಅದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸೂಚಿಸಿದರು.

ಪಟಾಕಿ ಅಗ್ನಿ ದುರಂತ ತಡೆ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದ ಸಿದ್ದರಾಮಯ್ಯ, ರಾಮಸ್ವಾಮಿ ರೆಡ್ಡಿ ಎಂಬಾತ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದಿದ್ದ. ಗೋಡೌನ್​ನಲ್ಲಿ ಮಿತಿ ಮೀರಿ ಪಟಾಕಿ ಸಂಗ್ರಹಕ್ಕೆ ಅನುಮತಿ ಪಡೆದಿರಲಿಲ್ಲ. ಹೀಗಾಗಿ ತಹಶೀಲ್ದಾರ್​, ಇನ್ಸ್​​ಪೆಕ್ಟರ್​​, ಅಗ್ನಿಶಾಮಕ ಅಧಿಕಾರಿಯನ್ನು ಅಮಾನತ್ತಿಗೆ ಆದೇಶಿಸಲಾಗಿದ್ದು, ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ ಎಂದರು.

You cannot copy content from Baravanige News

Scroll to Top