5 ವರ್ಷ ಪಿಎಫ್‌ಐ ಸಂಘಟನೆ ನಿಷೇಧ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.

PFI ಹಾಗೂ ಇತರ ಎಂಟು ಸಹ ಸಂಸ್ಥೆಗಳನ್ನು ತಕ್ಷಣದಿಂದ ನಿಷೇಧ: ಕಾನೂನು ಬಾಹಿರ ಸಂಘಟನೆಗಾಗಿ PFI ಹಾಗೂ ಇತರ ಎಂಟು ಸಹ ಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅನ್ವಯ ನಿಷೇಧಿಸಲಾಗಿದೆ ಎಂದು ಸರ್ಕಾರದ ಅಧಿಸೂಚನೆ ಹೇಳಿದೆ.ಸ್ಕೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ), ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಐಎಸ್‌ಐಎಸ್) ಸಂಘಟನೆಗಳ ಜತೆ ನಂಟು ಹೊಂದಿರುವ ಕಾರಣಕ್ಕೆ ಪಿಎಫ್‌ಐ ನಿಷೇಧಿಸಲಾಗಿದೆ ಎಂದು ಸರ್ಕಾರ ಹೇಳಿದೆ.ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗಸಂಸ್ಥೆಗಳಾದ ರೆಹಾಬ್ ಇಂಡಿಯಾ ಫೌಂಡೇಶನ್ (Rehab India Foundation), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ನೆಡರೇಶನ್ ಆಫ್ ಹೂಮನ್ ರೈಟ್ಸ್ ಆರ್ಗನೈಸೇಷನ್ (NCHRO), ನ್ಯಾಷನಲ್ ವಿಮೆನ್ಸ್ ಫ್ರಂಟ್ (NWF), ಜೂನಿಯರ್ ಫ್ರಂಟ್ (JF), ಎಂಪವರ್ ಇಂಡಿಯಾ ಫೌಂಡೇಶನ್ (EIF) ಮತ್ತು ರಿಹಾಬ್ ಫೌಂಡೇಶನ್, ಕೇರಳ (EFRF) ನಿಷೇಧಿಸಲಾಗಿದೆ.

Scroll to Top