ಪ್ರಕೃತಿ ವಿಕೋಪ ವೇಳೆ ಪ್ರಾಣಹಾನಿ ತಡೆಗೆ ಅಗತ್ಯ ಕ್ರಮ ವಹಿಸಿ – ಡಿಸಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಮಳೆಯಿಂದ ಉಂಟಾಗಬಹುದಾದ ನೆರೆ ಹಾಗೂ ಸಿಡಿಲು ಬಡಿತದಂಥ ವಿವಿಧ ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ಜೀವಹಾನಿಯಾಗದಂತೆ ಹಾಗೂ ಆಸ್ತಿ- ಪಾಸ್ತಿಗಳಿಗೆ ಹೆಚ್ಚಿನ ಹಾನಿ ಉಂಟಾಗುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಮುಂಬರುವ ದಿನಗಳಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಆಗುವ ಪ್ರವಾಹ ಸೇರಿದಂತೆ ವಿವಿಧ ಅವಘಡಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸಿದ್ಧರಾಗಿರಬೇಕು. ಜೊತೆಗೆ ನೆರೆ ಉಂಟಾಗಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಾಗೂ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂದರು.

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ನೀರು ಎಲ್ಲೆಂದರಲ್ಲಿ ನಿಲ್ಲದಂತೆ ನೋಡಿ ಕೊಳ್ಳಬೇಕು. ಸಾಂಕ್ರಾಮಿಕ ರೋಗಗಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ದಾಸ್ತಾನು ಇಟ್ಟುಕೊಂಡಿರಬೇಕು. ಇವುಗಳ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ನೀಡುತ್ತಿರಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಸೇರಿ ಇತರೆ ರಸ್ತೆಗಳ ಮೇಲೆ ಮಳೆ ಗಾಳಿಯಿಂದ ದೊಡ್ಡ ದೊಡ್ಡ ಮರಗಳು ಧರೆಗುರುಳಿದ ತಕ್ಷಣ ಸ್ಪಂದಿಸಿ, ಅದನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹಾಗೂ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಅಪಾಯಕಾರಿ ಮರಗಳನ್ನು ತೆರವು ಗೊಳಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಮಳೆಗಾಲಕ್ಕೂ ಮುನ್ನ ಯಾಂತ್ರೀಕೃತ ದೋಣಿಗಳನ್ನು ಬಳಸಿಕೊಂಡು ಮಾಡುವ ಮೀನುಗಾರಿಕೆಯನ್ನು ಹಾಗೂ ಆಳ ಸಮುದ್ರದ ಮೀನುಗಾರಿಕೆಯನ್ನು ನಿಷೇಧಿಸಬೇಕು. ಹವಾಮಾನ ಇಲಾಖೆಯಿಂದ ಬರುವ ಸಂದೇಶಗಳ ಕುರಿತು ಮೀನುಗಾರರಿಗೆ ಕೂಡಲೇ ಮಾಹಿತಿ ರವಾನಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತ ದೇವಿ ಜಿ.ಎಸ್., ಸಹಾಯಕ ಕಮಿಷನ‌ರ್ ರಶ್ಮಿ ಎಸ್, ಪೌರಾಯುಕ್ತ ರಾಯಪ್ಪ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿ ಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇಓಗಳು ಹಾಗೂ ಇತರರು ಉಪಸ್ಥಿತರಿದ್ದರು.

Scroll to Top