ಒಡಿಶಾ, ಜೂ.03: ಒಡಿಶಾ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆಯಾಗಿದ್ದು, “ರೈಲು ಅಪಘಾತಕ್ಕೆ ಕಾರಣರಾದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ, ಆಸ್ಪತ್ರೆಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಇದೊಂದು ನೋವಿನ ಘಟನೆ. ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನ ಕಳೆದುಕೊಂಡವರೊಂದಿಗೆ ಸರ್ಕಾರ ನಿಂತಿದೆ ಇದು ಗಂಭೀರ ಘಟನೆಯಾಗಿದೆ. ಪ್ರತಿ ಕೋನದಲ್ಲೂ ತನಿಖೆ ನಡೆಸುವ ಸೂಚನೆ ನೀಡಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.
ಬಹನಾಗ ರೈಲು ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಕ್ತಾಯ ಆಗಿದೆ. ರೈಲ್ವೆ ಇಲಾಖೆ ಸಿಬ್ಬಂದಿಗಳು ಬೋಗಿಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಹಿಟಾಚಿಗಳ ಮೂಲಕ ರೈಲ್ವೆ ಬೋಗಿಗಳ ತೆರವು ಕಾರ್ಯಾಚರಣೆ ಮಾಡಲಾಗಿದೆ.