ಬೆಂಗಳೂರು: ಮೈಸೂರು ದಸರಾ-2023 ಮತ್ತು ದಸರಾ ರಜೆಗಳ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ KSRTC ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ.
ಮುಂಬರುವ ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 24-ಅಕ್ಟೋಬರ್ 29 ರ ನಡುವೆ 2,000 ಹೆಚ್ಚುವರಿ ಬಸ್ ಕಾರ್ಯಾಚರಣೆಯನ್ನು KSRTC ಶುಕ್ರವಾರ ಪ್ರಕಟಿಸಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ-2023 ಕ್ಕೆ ಜನರನ್ನು ಸಾಗಿಸಲು ಇನ್ನೂ 600 ಬಸ್‌ಗಳನ್ನು ನಿಯೋಜಿಸಲಾಗುವುದು.
ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಚರಣೆ ಮಾಡಲಾಗುತ್ತದೆ. ಅದೇ ರೀತಿ ಅ. 24ರಿಂದ 29ರವರೆಗೆ ರಾಜ್ಯದ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ.