ಗ್ರಂಥಾಲಯ ಜ್ಞಾನದ ಭಂಡಾರ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಗ್ರಂಥಾಲಯ ಜ್ಞಾನದ ಭಂಡಾರ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಜ್ಞಾನದ ಭಂಡಾರವನ್ನು ಹೆಚ್ಚಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ರಾಷ್ಟೀಯ ಗ್ರಂಥಾಲಯ ಸಪ್ತಾಹ ಸಮಾರಂಭ -2023 ರ ಅಂಗವಾಗಿ ಸಿಬ್ಬಂದಿ ಸೇವಾ ಪುರಸ್ಕಾರ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಓದುಗ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ, ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.


ದೇಶ ಸುತ್ತು ಕೋಶ ಓದು ಎಂಬ ಶಿವರಾಮ ಕಾರಂತರ ಮಾತಿನಂತೆ, ಕೋಶ ಎಂದರೆ ಗ್ರಂಥಾಲಯ. ಇಲ್ಲಿ ಓದಿದಾಗ ಜ್ಞಾನ ವಿಸ್ತಾರವಾಗುತ್ತದೆ. ಹಾಗೆಯೇ ದೇಶ ಸುತ್ತುವುದರಿಂದ ಪ್ರತಿಯೊಬ್ಬರ ಜನಜೀವನ ಶೈಲಿಯನ್ನು ಅರ್ಥೈಸಿಕೊಳ್ಳಬಹುದಾಗಿದೆ ಎಂದರು. ಜಿಲ್ಲೆಯಲ್ಲಿ ಅತ್ಯುತ್ತಮ ಶೈಲಿಯಲ್ಲಿ, ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನೊಳಗೊಂಡಂತೆ ಗ್ರಂಥಾಲಯದ ಕಟ್ಟಡವನ್ನು ನಿರ್ಮಿಸಿದ್ದು, ಇಲ್ಲಿ ಸಾಕಷ್ಟು ಅತ್ಯುತ್ತಮ ಪುಸ್ತಕಗಳ ಸಂಗ್ರಹಣೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವವರಿಗೆ ಹಾಗೂ ಓದುಗರಿಗೆ ಸಹ ಉತ್ತಮ ಪರಿಸರ ವ್ಯವಸ್ಥೆ ಇದೆ. ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಗಳಲ್ಲಿರುವ ಗ್ರಂಥಾಲಯಗಳಲ್ಲಿಯೂ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿಯೂ ಸಕ್ರೀಯವಾಗಿ ಭಾಗವಹಿಸುವಂತೆ ತಿಳಿಸಿದರು.

ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಸಕಾರಾತ್ಮಕವಾಗಿ ಯೋಚನೆ ಮಾಡಬೇಕು. ಇದರಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆಯಲ್ಲಿರುವ ಗ್ರಂಥಾಲಯಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದರು.

Scroll to Top